ಮಂಗಳೂರು: ಕರಾವಳಿ ಭಾಗದಲ್ಲಿ ಆರ್ಥಿಕತೆಯನ್ನು ಹೆಚ್ಚಿಸುವ ಕೆಲಸವನ್ನು ಮುಂಬೈಯಲ್ಲಿ ನೆಲೆಸಿರುವ ಬಂಟರು ಮಾಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಬಂಟರ ಕೊಡುಗೆ ಇದೆ. ಊರಿನಲ್ಲಿ ನಡೆಯುವ ಹತ್ತಾರು ಕೆಲಸ ಕಾರ್ಯಗಳಿಗೆ ಮುಂಬೈಯಲ್ಲಿರುವ ಬಂಟರು ದೇಣಿಗೆಯನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ನನಗೆ ರಾಜಕೀಯ ಶಕ್ತಿಯನ್ನು ತುಂಬಿದವರು ಬಂಟರು. ಆ ಸಮಾಜದೊಂದಿಗೆ ಯಾವತ್ತೂ ಕೈ ಜೋಡಿಸಿ ಕೆಲಸ ಮಾಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು.
ಅವರು ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಸಮಾಜ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಐಕಳ ಹರೀಶ್ ಶೆಟ್ಟಿ ಅವರು ಅಧ್ಯಕ್ಷರಾದ ಬಳಿಕ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ನಿರಂತರ ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ನಡೆಸಿ ಸಮಾಜ ಬಾಂಧವರ ಪ್ರೀತಿಗೆ ಪಾತ್ರವಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಬಂಟ ಸಮಾಜದ ಜೊತೆಗೆ ಇತರ ಸಮಾಜವನ್ನೂ ಪ್ರೀತಿಸಿ ಸಹಾಯಹಸ್ತವನ್ನು ನೀಡುತ್ತಿರುವುದು ಶ್ಲಾಘನೀಯವಾಗಿದೆ. ಕರಾವಳಿ ಭಾಗದ ಬಂಟರು ಮುಂಬೈನಲ್ಲಿ ನೆಲೆಸಿ ಸಾಧನೆ ಮಾಡಿದ್ದಾರೆ. ತಮ್ಮ ದುಡಿಮೆಯ ಒಂದು ಭಾಗವನ್ನು ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾರೆ. ಎಂದು ವೇದವ್ಯಾಸ ಕಾಮತ್ ತಿಳಿಸಿದರು.
30 ಸೆನ್ಸ್ ಜಾಗ ಕೊಡಿ ಶಾಸಕರಿಗೆ ಮನವಿ: ಬಂಟರ ಸಂಘಗಳ ಒಕ್ಕೂಟದ ಕಾರ್ಯ ವೈಖರಿಯನ್ನು ಮನಸಾರೆ ಕೊಂಡಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪ್ರಸ್ತಾವನೆಯೊಂದನ್ನು ಸಲ್ಲಿಸಿದರು.
ಬಂಟರ ಸಂಘಗಳ ಒಕ್ಕೂಟವು ದಾನಿಗಳಿಂದ ಪಡೆದ ಹಣವನ್ನು ಸಮಾಜದಲ್ಲಿರುವ ಜನರಿಗೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಒಕ್ಕೂಟಕ್ಕೆ ಆದಾಯ ತರುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ 30 ರಿಂದ 50 ಸೆನ್ಸ್ ಜಾಗ ದೊರಕಿಸಿ ಕೊಟ್ಟಲ್ಲಿ ಅದರಲ್ಲಿ ಸಭಾಭವನ ನಿರ್ಮಿಸಿ ಅದರಿಂದ ಬರುವ ಹಣವನ್ನು ಎಲ್ಲಾ ಸಮಾಜಕ್ಕೆ ವಿನಿಯೋಗಿಸುತ್ತೇವೆ ಎಂದು ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಒಕ್ಕೂಟದ ಮನವಿಗೆ ಶಾಸಕರು ಸ್ಪಂದಿಸುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ, ಪತ್ರಕರ್ತರಾದ ಬಿ. ರವೀಂದ್ರ ಶೆಟ್ಟಿ, ಪ್ರದೀಪ್ ಕುಮಾರ್ ರೈ ಐಕಳ ಬಾವ, ಶಿಕ್ಷಕ ಸಾಯಿನಾಥ ಶೆಟ್ಟಿ ಮುಂಡ್ಕೂರು, ಪಿಎಚ್‌ಡಿ ಪದವಿ ಪಡೆದ ಡಾ. ಸುಧಾರಾಣಿ, ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಶಿವಾನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಂಬಯಿಯ ಆರ್ಗನಿಕ್ ಕೆಮಿಕಲ್ಸ್ ಸಂಸ್ಥೆಯ ಸಿ.ಎಂ.ಡಿ ಆನಂದ್ ಎಂ. ಶೆಟ್ಟಿ, ಉದ್ಯಮಿ ಮುಂಬಯಿ ಶಶಿಧರ ಶೆಟ್ಟಿ ಇನ್ನಂಜೆ, ಶಾಸಕ ವೇದವ್ಯಾಸ ಕಾಮತ್ ಇದ್ದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಕ ಮಾತುಗಳನ್ನಾಡಿದರು, ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಫಲಾನುಭವಿಗಳ ಹೆಸರನ್ನು ವಾಚಿಸಿದರು. ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ ಶೆಟ್ಟಿ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ್, ಕಾರ್ಪೋರೇಟರ್ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.
ಅದೇ ರೀತಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಬೊಲ್ಯೊಟ್ಟು ಶಶಿಧರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಬೆಳ್ಳಂಪಳ್ಳಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ಗುರುಪುರ ಬಂಟರ ಸಂಘದ ಅಧ್ಯಕ್ಷ ಸಂತೋಷ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿ ಒಟ್ಟು 95 ಮಂದಿಗೆ 30 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್‌ನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಿತರಿಸಿದರು.
ಪ್ರತೀ ತಿಂಗಳು ಸಮಾಜ ಕಲ್ಯಾಣ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ ವೈದ್ಯಕೀಯ, ಮದುವೆ, ಶಿಕ್ಷಣ, ದತ್ತು ಸ್ವೀಕಾರ, ಮನೆ ರಿಪೇರಿ ಮತ್ತು ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಚೆಕ್‌ನ್ನು ವಿತರಿಸಲಾಯಿತು. ಉದಯಕುಮಾರ್ ರೈ ಪ್ರಾರ್ಥನೆಗೈದರು. ಪುರುಷೋತ್ತಮ ಭಂಡಾರಿ ಅಡ್ಯಾರ್, ಶರತ್ ಶೆಟ್ಟಿ ಕಿನ್ನಿಗೋಳಿ, ಸತೀಶ್ ಅಡಪ ಸಂಕಬೈಲ್ ಸನ್ಮಾನ ಪತ್ರ ವಾಚಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರ್ವಹಿಸಿದರು.